< ಕೀರ್ತನೆಗಳು 57 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು. 2 ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು. 3 ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; (ಸೆಲಾ) ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು. 4 ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ. 5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. 6 ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. (ಸೆಲಾ) 7 ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು. 8 ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು. 9 ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು. 10 ೧೦ ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ. 11 ೧೧ ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

< ಕೀರ್ತನೆಗಳು 57 >